



ಬೆಂಗಳೂರು: ವಸತಿ ಕಟ್ಟಡವೊಂದಕ್ಕೆ ವಿದ್ಯುತ್ ಸಂಪರ್ಕಕ್ಕೆ ಮಂಜೂರಾತಿ ನೀಡಲು 30 ಸಾವಿರ ರೂ. ಲಂಚ ಪಡೆಯುತ್ತಿದ್ದ ಬೆಸ್ಕಾಂ ಕೊತ್ತನೂರು ಉಪ ವಿಭಾಗದ ಸಹಾಯಕ ಎಂಜಿನಿಯರ್ ರಾಜೇಶ್ ಟಿ.ಸಿ. ಅವರನ್ನು ಲೋಕಾಯುಕ್ತ ಪೊಲೀಸರು ಬುಧವಾರ ಬಂಧಿಸಿದ್ದಾರೆ
ಕಾರ್ಯಾಚರಣೆ ವೇಳೆ ಕಚೇರಿ ಶೋಧ ನಡೆಸಿದಾಗ 2.77 ಲಕ್ಷ ರೂ. ನಗದು ಪತ್ತೆಯಾಗಿದೆ. ಕಚೇರಿ ಆವರಣದಲ್ಲಿದ್ದ ಮಾರುತಿ ಆಲ್ಲೊ ಕಾರೊಂದನ್ನೂ ವಶಕ್ಕೆ ಪಡೆಯಲಾಗಿದೆ. ಆರೋಪಿಯ ಮನೆ ಮೇಲೂ ಲೋಕಾಯುಕ್ತ ಪೊಲೀಸರು ದಾಳಿಮಾಡಿದ್ದು, ಶೋಧ ನಡೆಸುತ್ತಿದ್ದಾರೆ.
ಜಿ. ಗಂಗಾಧರಯ್ಯ ಎಂಬ ಎಲೆಕ್ನಿಕ್ ಗುತ್ತಿಗೆದಾರರು ವಸತಿ ಕಟ್ಟಡವೊಂದಕ್ಕೆ ವಿದ್ಯುತ್ ಸಂಪರ್ಕಕ್ಕೆ ಮಂಜೂರಾತಿ ಕೋರಿ ಅರ್ಜಿ ಸಲ್ಲಿಸಿದ್ದರು. ಪ್ರಕ್ರಿಯೆ ಪೂರ್ಣಗೊಳಿಸಲು 30 ಸಾವಿರ ರೂಪಾಯಿ ಲಂಚ ನೀಡುವಂತೆ ಸಹಾಯಕ ಎಂಜಿನಿಯರ್ ಬೇಡಿಕೆ ಇಟ್ಟಿದ್ದರು. ಈ ಕುರಿತು ಅರ್ಜಿದಾರರು ಲೋಕಾಯುಕ್ತದ ಬೆಂಗಳೂರು ನಗರ ಪೊಲೀಸ್ ಘಟಕಕ್ಕೆ ದೂರು ನೀಡಿದ್ದರು.
ಆರೋಪಿಯ ಸೂಚನೆಯಂತೆ ಕೊತ್ತನೂರು ಬೆಸ್ಕಾಂ ಕಚೇರಿಗೆ ಹೋದ ಗಂಗಾಧರಯ್ಯ ಲಂಚದ ಹಣ ತಲುಪಿಸಿದರು. ತಕ್ಷಣ ದಾಳಿಮಾಡಿದ ಲೋಕಾಯುಕ್ತ ಪೊಲೀಸರು ಆರೋಪಿಯನ್ನು ಬಂಧಿಸಿದರು ಎಂದು ಲೋಕಾಯುಕ್ತದ ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.
ಲೋಕಾಯುಕ್ತದ ಬೆಂಗಳೂರು ನಗರ ಘಟಕದ ಎಸ್‌ಪಿ ಕೆ.ವಿ. ಅಶೋಕ್ ಅವರ ಮಾರ್ಗದರ್ಶನದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಡಿವೈಎಸ್‌ಪಿ ವೀರೇಂದ್ರ ಕುಮಾರ್, ಇನ್‌ಸ್ಪೆಕ್ಟರ್‌ಗಳಾದ ಗಂಗರುದ್ರಯ್ಯ, ಅಂಜನ್ ಕುಮಾರ್, ಕೇಶವಮೂರ್ತಿ ಮತ್ತು ಸಿಬ್ಬಂದಿ ಪಾಲ್ಗೊಂಡಿದ್ದರು.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.