



ನವದೆಹಲಿ: ಸಣ್ಣ ಉಳಿತಾಯ ಯೋಜನೆಗಳಲ್ಲಿ ಹೂಡಿಕೆ ಮಾಡಲು ಪ್ಯಾನ್ ಮತ್ತು ಆಧಾರ್ ಕಾರ್ಡ್ ಮುಖ್ಯ ಎಂದು ಕೇಂದ್ರ ಹಣಕಾಸು ಸಚಿವಾಲಯ ಹೇಳಿದೆ.
ಆಧಾರ್ ಹಾಗೂ ಪ್ಯಾನ್ ಕಾರ್ಡ್ ಇನ್ನು ಮುಂದೆ ಎಲ್ಲ ದಾಖಲೆಗಳಿಗೂ ಹಾಗೂ ಕೆಲಸಗಳಿಗೆ ಮುಖ್ಯವಾಗಿರುತ್ತದೆ. ಸಣ್ಣ ಉಳಿತಾಯ ಯೋಜನೆಗಳಲ್ಲಿ ಹೂಡಿಕೆ ಮಾಡಲು ನಿಮ್ಮ ಪ್ಯಾನ್ ಮತ್ತು ಆಧಾರ್ ಸಂಖ್ಯೆ ಕಡ್ಡಾಯ ಎಂದು ಹಣಕಾಸು ಸಚಿವಾಲಯ ಸ್ಪಷ್ಟಪಡಿಸಿದೆ. ಉಳಿತಾಯ ಖಾತೆ ತೆರೆಯುವಾಗ ಪ್ಯಾನ್ ಸಂಖ್ಯೆಯನ್ನು ಒದಗಿಸಬೇಕು ಎಂದು ಹಣಕಾಸು ಸಚಿವಾಲಯದ ಅಧಿಸೂಚನೆ ತಿಳಿಸಿದೆ. ಖಾತೆ ತೆರೆಯುವ ಸಮಯದಲ್ಲಿ ಈ ಎರಡು ದಾಖಲೆಗಳನ್ನು ಕಡ್ಡಾಯವಾಗಿ ಸಲ್ಲಿಸಬೇಕು, ಅದನ್ನು ಕೂಡ ಎರಡು ತಿಂಗಳೊಳಗೆ ಸಲ್ಲಿಸಬೇಕು.
ಈ ಹಿಂದೆ ಆಧಾರ್ ಸಂಖ್ಯೆಯನ್ನು ಸಲ್ಲಿಸದೆಯೇ ಇಂತಹ ಯೋಜನೆಗಳಲ್ಲಿ ಹೂಡಿಕೆ ಮಾಡಬಹುದಾಗಿತ್ತು. ಆದರೆ, ಈಗ ಈ ಯೋಜನೆಗಳಲ್ಲಿ ಹೂಡಿಕೆ ಮಾಡಲು ಚಂದಾದಾರರು ಕನಿಷ್ಠ ಆಧಾರ್ ಸಂಖ್ಯೆಯನ್ನಾದರೂ ಸಲ್ಲಿಸಬೇಕಾಗುತ್ತದೆ. ಅಲ್ಲದೆ, ನಿರ್ದಿಷ್ಟ ಮಿತಿಗಿಂತ ಹೆಚ್ಚಿನ ಹೂಡಿಕೆಯನ್ನು ಮಾಡಿದರೆ, ಬಳಕೆದಾರರು ಪ್ಯಾನ್ ಸಂಖ್ಯೆಯನ್ನು ಒದಗಿಸಬೇಕಾಗುತ್ತದೆ ಎಂದು ಮಾ.31ರಂದು ಹಣಕಾಸು ಸಚಿವಾಲಯ ಹೊರಡಿಸಿರುವ ಅಧಿಸೂಚನೆಯಲ್ಲಿ ಹೇಳಿದೆ. PPF, ಸುಕನ್ಯಾ ಸಮೃದ್ಧಿ ಯೋಜನೆ (SSY), ರಾಷ್ಟ್ರೀಯ ಉಳಿತಾಯ ಪ್ರಮಾಣಪತ್ರ ಮುಂತಾದ ಸಣ್ಣ ಉಳಿತಾಯ ಯೋಜನೆಗಳಲ್ಲಿ ಹೂಡಿಕೆ ಮಾಡಿದ ಚಂದಾದಾರರು ಸೆಪ್ಟೆಂಬರ್ 30ರೊಳಗೆ ಆಧಾರ್ ಸಂಖ್ಯೆಯನ್ನು ಸಲ್ಲಿಸಬೇಕು ಎಂದು ಅಧಿಸೂಚನೆಯು ತಿಳಿಸಿದೆ.
ಚಂದಾದಾರರಿಗೆ ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರದಿಂದ (UIDAI) ಆಧಾರ್ ಸಂಖ್ಯೆಯನ್ನು ನಿಯೋಜಿಸದಿದ್ದರೆ, ನಿಮ್ಮ ನೋಂದಣಿ ಸಂಖ್ಯೆ ಕಾರ್ಯನಿರ್ವಹಿಸುತ್ತದೆ. ಆದರೆ ಖಾತೆ ತೆರೆದ ಆರು ತಿಂಗಳೊಳಗೆ ಆಧಾರ್ ವಿವರಗಳನ್ನು ಸಲ್ಲಿಸದಿದ್ದರೆ, ಈ ವರ್ಷ ಅಕ್ಟೋಬರ್ 1ರಿಂದ ಸಣ್ಣ ಉಳಿತಾಯ ಯೋಜನೆ ಖಾತೆಯನ್ನು ಸ್ಥಗಿತಗೊಳಿಸಲಾಗುತ್ತದೆ ಎಂದು ಹಣಕಾಸು ಸಚಿವಾಲಯ ಸ್ಪಷ್ಟಪಡಿಸಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.