

ಬೆಂಗಳೂರು: ಕರ್ನಾಟಕದ ಹವಾಮಾನದಲ್ಲಿ ಮತ್ತೊಮ್ಮೆ ಮಹತ್ವದ ಬದಲಾವಣೆಯಾಗುವ ಮುನ್ಸೂಚನೆ ಸಿಕ್ಕಿದೆ. ರಾಜ್ಯದಲ್ಲಿ ಕಳೆದ ಕೆಲವು ದಿನಗಳಿಂದ ಮಳೆಯ ಪ್ರಮಾಣ ತಗ್ಗಿದ್ದು, ಮುಂದಿನ ದಿನಗಳಲ್ಲಿ ಗಾಳಿಯ ದಿಕ್ಕಿನಲ್ಲಾಗುವ ಬದಲಾವಣೆಯಿಂದ ಹವಾಮಾನದ ಮೇಲೂ ಪರಿಣಾಮ ಬೀರುವ ಸಾಧ್ಯತೆಯಿದೆ.
ಬಂಗಾಳಕೊಲ್ಲಿಯಿಂದ ಬೀಸುತ್ತಿದ್ದ ಗಾಳಿಯು ದಕ್ಷಿಣದತ್ತ ಚಲಿಸುತ್ತಿದ್ದ ಕಾರಣ ರಾಜ್ಯದಲ್ಲಿ ಮಳೆ ಕಡಿಮೆಯಾಗಿತ್ತು. ಇದೀಗ ಉತ್ತರ ಭಾರತದಿಂದ ದಕ್ಷಿಣ ಭಾರತದ ಕಡೆಗೆ ಗಾಳಿ ಬೀಸುತ್ತಿದ್ದು, ರಾಜ್ಯದಲ್ಲಿ ಒಣ ಹವೆ ಮುಂದುವರಿಯಲು ಇದು ಕಾರಣವಾಗಿದೆ. ಮುಂಬರುವ ದಿನಗಳಲ್ಲಿ ಗಾಳಿಯ ದಿಕ್ಕಿನಲ್ಲಿ ವ್ಯತ್ಯಯವಾಗುವ ನಿರೀಕ್ಷೆಯಿದ್ದು, ಕೆಲವು ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ಕಂಡುಬರಲಿದೆ.
ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಇಷ್ಟು ದಿನ ಕಂಡುಬಂದ ಮಳೆಯ ವಾತಾವರಣ ಬದಲಾಗಿ, ಬಿಸಿಲು ಹಾಗೂ ಅಲ್ಲಲ್ಲಿ ಮೋಡ ಕವಿದ ವಾತಾವರಣ ಮುಂದುವರಿಯಲಿದೆ.
ಕಾಸರಗೋಡು ಮತ್ತು ದಕ್ಷಿಣ ಕನ್ನಡದ ಗಡಿ ಭಾಗದ ಒಂದೆರಡು ಕಡೆಗಳಲ್ಲಿ ಮಾತ್ರ ರಾತ್ರಿ ಅಥವಾ ತಡರಾತ್ರಿ ತುಂತುರು ಮಳೆಯಾಗುವ ಸಾಧ್ಯತೆಯಿದೆ. ನವೆಂಬರ್ 29ರಿಂದ ಕರಾವಳಿ ಭಾಗದಲ್ಲಿ ಮಳೆ ಸಂಪೂರ್ಣವಾಗಿ ತಗ್ಗುವ ನಿರೀಕ್ಷೆಯಿದೆ.
ಡಿಸೆಂಬರ್ 2 ಮತ್ತು 3ರಂದು ಮಾತ್ರ ಕರಾವಳಿ ಜಿಲ್ಲೆಗಳಲ್ಲಿ ಮೋಡದ ಪ್ರಮಾಣ ಸ್ವಲ್ಪ ಹೆಚ್ಚಾಗುವ ಸಾಧ್ಯತೆಯಿದೆ.
ಮಲೆನಾಡಿನ ಕೊಡಗು ಜಿಲ್ಲೆಯ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಸಂಜೆ ಹಾಗೂ ರಾತ್ರಿ ವೇಳೆ ಸಾಮಾನ್ಯ ಮಳೆಯಾಗುವ ಮುನ್ಸೂಚನೆ ಇದೆ.
ಉಳಿದಂತೆ ಕೊಡಗು, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡ ಕವಿದ ವಾತಾವರಣ ಇರಲಿದೆ. ಡಿಸೆಂಬರ್ 2 ಮತ್ತು 3ರಂದು ಈ ಜಿಲ್ಲೆಗಳಲ್ಲಿಯೂ ಮೋಡಗಳು ಕೊಂಚ ದಟ್ಟವಾಗುವ ಸಾಧ್ಯತೆಯಿದೆ.
ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಸದ್ಯಕ್ಕೆ ಒಣ ಹವೆ ಮುಂದುವರಿಯಲಿದೆ. ಮುಂದಿನ 10 ದಿನಗಳವರೆಗೆ ಮಳೆಯಾಗುವ ಯಾವುದೇ ಲಕ್ಷಣಗಳಿಲ್ಲ ಎಂದು ಮುನ್ಸೂಚನೆ ತಿಳಿಸಿದೆ.
ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಸಾಧಾರಣ ಮೋಡ ಕವಿದ ವಾತಾವರಣ ಇರಲಿದೆ. ಆದರೆ ಡಿಸೆಂಬರ್ 1ರಿಂದ ಮೋಡದ ಪ್ರಮಾಣ ಸ್ವಲ್ಪ ಹೆಚ್ಚಾಗುವ ನಿರೀಕ್ಷೆಯಿದೆ.
ಸದ್ಯಕ್ಕೆ ದಕ್ಷಿಣ ಒಳನಾಡಿನಲ್ಲಿಯೂ ಮಳೆಯ ಮುನ್ಸೂಚನೆ ಇಲ್ಲ. ಮುಂದಿನ ದಿನಗಳಲ್ಲಿ ವಾತಾವರಣದಲ್ಲಿ ಆಗುವ ಬದಲಾವಣೆಗಳನ್ನು ಗಮನಿಸಬೇಕಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.