



ಕಾರ್ಕಳ : ಭಾರಿ ಕುತೂಹಲ ಮೂಡಿಸಿದ್ದ ಕಾರ್ಕಳ ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಗುತ್ತಿಗೆದಾರರಾಗಿರುವ ಮುನಿಯಾಲು ಉದಯ ಕುಮಾರ್ ಶೆಟ್ಟಿ ಅವರ ಹೆಸರು ಘೋಷಣೆಯಾಗಿದೆ. ಕಾರ್ಕಳದ ಕಾಂಗ್ರೆಸ್ ಅಭ್ಯರ್ಥಿ ಯಾರಾಗಲಿದ್ದಾರೆ ಎಂಬ ಕುರಿತು ರಾಜಕೀಯ ವಲಯದಲ್ಲಾಗುತ್ತಿದ್ದ ಚರ್ಚೆಗೆ ಇದೀಗ ತೆರೆ ಬಿದ್ದಿದೆ. ಇಂದು ಕಾಂಗ್ರೇಸ್‌ನ ಮೂರನೇ ಪಟ್ಟಿ ಬಿಡುಗಡೆಯಾಗಿದ್ದು, ಕಾರ್ಕಳದ ಅಭ್ಯರ್ಥಿಯಾಗಿ ಉದಯ್ ಕುಮಾರ್ ಶೆಟ್ಟಿ ಆಯ್ಕೆಯಾಗಿದ್ದಾರೆ.
ಉದಯ ಕೃಷ್ಣಯ್ಯ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷರಾಗಿರುವ ಉದಯ ಶೆಟ್ಟಿ ಅವರು ಉಡುಪಿ ಜಿಲ್ಲಾ ಕಾಂಗ್ರೆಸ್‌ನ ಉಪಾಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು. ಎಂಟೆಕ್ ಪದವೀಧರರಾದ ಇವರು ಉಡುಪಿ ಜಿಲ್ಲಾ ಗುತ್ತಿಗೆದಾರರ ಸಂಘದ ಅಧ್ಯಕ್ಷರಾಗಿ, ಪ್ರಸ್ತುತ ಹೆಬ್ರಿ -ಅಜೆಕಾರು ವಲಯ ಬಂಟರ ಸಂಘದ ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಟ್ರಸ್ಟ್ ಮೂಲಕ ಸಾಮಾಜಿಕ, ಧಾರ್ಮಿಕ, ಸಾಂಸ್ಕೃತಿಕ, ಶೈಕ್ಷಣಿಕ ಕ್ಷೇತ್ರಗಳಿಗೆ ತನ್ನದೇ ಆದ ಕೊಡುಗೆ ನೀಡಿರುವ ಇವರು 2018ರ ವಿಧಾನ ಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಟಿಕೆಟ್‌ಗಾಗಿ ಭಾರಿ ಪೈಪೋಟಿ ನಡೆಸಿದ್ದರು. ಕೊನೆ ಕ್ಷಣದಲ್ಲಿ ಟಿಕೆಟ್ ಗೋಪಾಲ್ ಭಂಡಾರಿ ಪಾಲಾಯಿತು. ಇದರಿಂದ ನಿರಾಸೆಗೊಂಡ ಅವರು ಬಳಿಕದ ದಿನಗಳಲ್ಲಿ ಪಕ್ಷದ ಕಾರ್ಯದಿಂದ ತುಸು ದೂರ ಸರಿದರು. ಇದೀಗ ಕಾರ್ಕಳ ಕಾಂಗ್ರೆಸ್‌ನ ರಾಜಕೀಯ ಬೆಳವಣಿಗೆಯಲ್ಲಿ ಅಂತಿಮವಾಗಿ ಟಿಕೆಟ್ ಮುನಿಯಾಲು ಪಾಲಾಗಿದೆ.
ನಾಲ್ವರು ಅರ್ಜಿ ಸಲ್ಲಿಸಿದ್ದರು ಕಾರ್ಕಳ ವಿಧಾನ ಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಕಾಂಗ್ರೆಸ್ ಟಿಕೆಟ್‌ಗಾಗಿ ಕೆಪಿಸಿಸಿ ನಿಯಮದಂತೆ 2 ಲ. ರೂ. ಹಣ ಸಂದಾಯ ಮಾಡಿ ಹೆಬ್ರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಂಜುನಾಥ ಪೂಜಾರಿ ಮುದ್ರಾಡಿ, ಕಾರ್ಕಳ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ ಡಿ.ಆರ್. ರಾಜು, ಉದ್ಯಮಿ ಸುರೇಂದ್ರ ಶೆಟ್ಟಿ ಮತ್ತು ಉಡುಪಿ ಜಿಲ್ಲಾ ಕಾಂಗ್ರೆಸ್‌ನ ಉಪಾಧ್ಯಕ್ಷ ನೀರೆ ಕೃಷ್ಣ ಶೆಟ್ಟಿ ಅರ್ಜಿ ಸಲ್ಲಿಸಿದ್ದರು. ಇತ್ತೀಚೆಗೆ ಮಂಜುನಾಥ್ ಪೂಜಾರಿ ಮತ್ತು ಉದಯ್ ಕುಮಾರ್ ಶೆಟ್ಟಿ ಹೆಸರು ಮುಂಚೂನಿಯಲ್ಲಿತ್ತು. ಇದೀಗ ಟಿಕೆಟ್ ಮುನಿಯಾಲು ಉದಯ್ ಕುಮಾರ್ ಶೆಟ್ಟಿಯವರಿಗೆ ಘೋಷಣೆಯಾಗಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.