


ಮಂಗಳೂರು: ಮಂಗಳೂರು ನಗರದ ಯುವಕರು ಮತ್ತು ವಿದ್ಯಾರ್ಥಿಗಳಿಗೆ ಮಾದಕ ವಸ್ತು ಪೂರೈಸುತ್ತಿದ್ದ ಆರೋಪದ ಮೇಲೆ 42 ವರ್ಷದ ಮಹಿಳೆಯೊಬ್ಬರನ್ನು ಮಂಗಳೂರು ಉತ್ತರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಆರೋಪಿಯ ಅಪಾರ್ಟ್‌ಮೆಂಟ್ ಮೇಲೆ ದಾಳಿ ನಡೆಸಿದ ಪೊಲೀಸರು, ಸುಮಾರು 15.3 ಲಕ್ಷ ರೂ. ಮೌಲ್ಯದ 153 ಗ್ರಾಂ ಎಂಡಿಎಂಎ ವಶಪಡಿಸಿಕೊಂಡಿದ್ದಾರೆ.
ಬಂಧಿತ ಮಹಿಳೆಯನ್ನು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಲಾಯಿಲ ಗ್ರಾಮದ ಗುರಿಂಗಾನ ನಿವಾಸಿ ನಸೀಮಾ ಅಲಿಯಾಸ್ ನಸೀಮ್ (42) ಎಂದು ಗುರುತಿಸಲಾಗಿದೆ.
ನವೆಂಬರ್ 1ರಂದು ಮಂಗಳೂರು ಉತ್ತರ ಪೊಲೀಸ್ ಠಾಣೆಯಲ್ಲಿ ದಾಖಲಾದ ಮಾದಕ ವಸ್ತು ಸೇವನೆ ಪ್ರಕರಣದ ತನಿಖೆ ನಡೆಸುತ್ತಿದ್ದ ವೇಳೆ ಈ ಪೂರೈಕೆ ಜಾಲ ಬೆಳಕಿಗೆ ಬಂದಿದೆ. ಪ್ರಕರಣದ ಆರೋಪಿಗೆ ನಸೀಮಾ ಮಾದಕ ವಸ್ತು ಪೂರೈಸುತ್ತಿದ್ದ ಬಗ್ಗೆ ಪೊಲೀಸರಿಗೆ ಮಾಹಿತಿ ಲಭಿಸಿತ್ತು.
ಈ ಹಿನ್ನೆಲೆಯಲ್ಲಿ ತನಿಖೆ ಮುಂದುವರಿಸಿದ ಪೊಲೀಸರು, ಖಚಿತ ಮಾಹಿತಿ ಆಧರಿಸಿ ಪಂಪ್‌ವೆಲ್-ಉಜ್ಜೋಡಿ ಬಳಿಯ ಅಪಾರ್ಟ್‌ಮೆಂಟ್‌ನ ಮೊದಲ ಮಹಡಿಯಲ್ಲಿರುವ ಫ್ಲಾಟ್ ಮೇಲೆ ದಾಳಿ ನಡೆಸಿದ್ದಾರೆ. ಈ ವೇಳೆ 15.3 ಲಕ್ಷ ರೂ. ಮೌಲ್ಯದ 153 ಗ್ರಾಂ ಎಂಡಿಎಂಎ ಪತ್ತೆಯಾಗಿದ್ದು, ಅದನ್ನು ವಶಕ್ಕೆ ಪಡೆಯಲಾಗಿದೆ.
ವಿಚಾರಣೆ ವೇಳೆ ನಸೀಮಾ ಮಂಗಳೂರು ನಗರದ ವಿವಿಧೆಡೆ ಯುವಕರು ಮತ್ತು ವಿದ್ಯಾರ್ಥಿಗಳಿಗೆ ಮಾದಕ ವಸ್ತುಗಳನ್ನು ಪೂರೈಸಿ ಮಾರಾಟ ಮಾಡುತ್ತಿದ್ದ ಸಂಗತಿ ತಿಳಿದುಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಬಂಧಿತ ಮಹಿಳೆಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಈ ಜಾಲದಲ್ಲಿ ಇನ್ನೂ ಕೆಲವರು ಭಾಗಿಯಾಗಿರುವ ಶಂಕೆಯಿದ್ದು, ಅವರ ಪತ್ತೆ ಮತ್ತು ಬಂಧನಕ್ಕಾಗಿ ಪೊಲೀಸರು ಶೋಧ ಕಾರ್ಯ ಮುಂದುವರಿಸಿದ್ದಾರೆ.
ಮಂಗಳೂರು ಉತ್ತರ ಪೊಲೀಸ್ ಠಾಣೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಈ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.