



ಉಡುಪಿ:
ನೆರೆಯ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆಯುತ್ತಿರುವ ವಿದ್ಯಮಾನಗಳ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಒಂದಷ್ಟು ಮಂದಿ ಪ್ರಚೋದನಕಾರಿ ಹೇಳಿಕೆಗಳನ್ನು ಹಾಕುತ್ತಿರುವ ಕುರಿತು ಉಡುಪಿ ಜಿಲ್ಲಾ ಪೊಲೀಸ್ ಗಂಭೀರವಾಗಿ ಪರಿಗಣಿಸಿದೆ. ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ರೀತಿಯ ಪ್ರಚೋದನಾಕಾರಿ ಸಂದೇಶ ಅಥವಾ ಹೇಳಿಕೆಗಳನ್ನು ಹಾಕಿದರೆ ಅಂತವರ ವಿರುದ್ದ ಕಾನೂನು ರೀತಿಯ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಉಡುಪಿ ಪೊಲೀಸ್ ವರಿಷ್ಠಾಧಿಕಾರಿ ಎನ್ ವಿಷ್ಣುವರ್ಧನ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಫೇಸ್ ಬುಕ್, ವಾಟ್ಸಾಪ್, ಟ್ವಿಟರ್ ಸೇರಿದಂತೆ ಸಾಮಾಜಿಕ ಜಾಲತಾಣದಲ್ಲಿ ಕಾನೂನು ಸುವ್ಯವಸ್ಥೆ, ಶಾಂತಿ ಸುವ್ಯವಸ್ಥೆಗೆ, ಕೋಮು ಸೌಹಾರ್ದತೆಗೆ ಧಕ್ಕೆ ತರುವಂತಹ ಹಾಗೂ ಪರಸ್ಪರ ಗುಂಪಿನ ನಡುವೆ ದ್ವೇಷ ಭಾವನೆ ಬರುವಂತಹ ಪ್ರಚೋದನಕಾರಿ ಹೇಳಿಕೆ ಹಾಕುವವರ ಹಾಗೂ ಫಾರ್ವರ್ಡ್ ಮಾಡುವವರ ವಿರುದ್ದ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು. ಈ ಬಗ್ಗೆ ವಾಟ್ಸಪ್, ಗ್ರೂಪ್ ಅಡ್ಮಿನ್ ಗಳು ಬಳಕೆದಾರರು ಹಾಗೂ ಸಂದೇಶಗಳನ್ನು ಫಾರ್ವರ್ಡ್ ಮಾಡುವವರು ಸೂಕ್ತ ಎಚ್ಚರಿಕೆಯನ್ನು ವಹಿಸುವುದು ಹಾಗೂ ವಾಟ್ಸಾಪ್ ಗ್ರೂಪ್ ಅಡ್ಮಿನ್ ಗಳು ತಮ್ಮ ಗುಂಪಿನ ಸದಸ್ಯರಿಗೆ ಸೂಕ್ತ ತಿಳುವಳಿಕೆ ನೀಡಬೇಕು. ಸಂಘಟನೆ, ವ್ಯಕ್ತಿಗಳು ಸೇರಿದಂತೆ ಸಾಮಾಜಿಕ ಜಾಲ ತಾಣದಲ್ಲಿ ಸಕ್ರಿಯವಾಗಿರುವ ನಾನಾ ವ್ಯಕ್ತಿಗಳು, ಗುಂಪುಗಳ ಮೇಲೆ ಕಠಿಣ ನಿಗಾ ಇರಿಸಲಾಗಿದೆ. ಆನ್ಲೈನ್ ಮಾಧ್ಯಮ, ವೆಬ್ ಪೇಜ್, ಮುದ್ರಣ ಮಾಧ್ಯಮ ಮೇಲೂ ನಿಗಾ ವಹಿಸಲಾಗಿದೆ ಎಂದರು.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.