


ಕಾರ್ಕಳ: ಕರಾವಳಿ ಭಾಗದಲ್ಲಿ ಹೈಕೋರ್ಟ್ ಪೀಠ ಸ್ಥಾಪಿಸಬೇಕೆಂಬ ಬೇಡಿಕೆಗೆ ವ್ಯಾಪಕ ಜನಬೆಂಬಲ ಕ್ರೋಡೀಕರಿಸುವ ನಿಟ್ಟಿನಲ್ಲಿ ಕರಾವಳಿ ಹೈಕೋರ್ಟ್ ಪೀಠ ಹೋರಾಟ ಸಮಿತಿ, ಉಡುಪಿ ಜಿಲ್ಲೆಯ ಕರೆಯ ಮೇರೆಗೆ ಕಾರ್ಕಳ ವಕೀಲರ ಸಂಘದ ನೇತೃತ್ವದಲ್ಲಿ ತಾಲೂಕು ಮಟ್ಟದ ಹಕ್ಕೊತ್ತಾಯ ಸಭೆ ಆಯೋಜಿಸಲು ನಿರ್ಧರಿಸಲಾಗಿದೆ.
ಈ ಕುರಿತು ಕಾರ್ಕಳ ವಕೀಲರ ಸಂಘದ ಸಭಾಂಗಣದಲ್ಲಿ ಪೂರ್ವಭಾವಿ ಸಭೆ ನಡೆಯಿತು. ಸಭೆಯಲ್ಲಿ ನವೆಂಬರ್ 14ರ ಶನಿವಾರ ಮಧ್ಯಾಹ್ನ 3.30ಕ್ಕೆ ಕಾರ್ಕಳ ಅನಂತಶಯನದ ಬಳಿಯ ಹೋಟೆಲ್ ಪ್ರಕಾಶ್ ಸಭಾಂಗಣದಲ್ಲಿ 'ಕಾರ್ಕಳ ತಾಲೂಕು ಹಕ್ಕೊತ್ತಾಯ ಸಭೆ' ನಡೆಸಲು ತೀರ್ಮಾನಿಸಲಾಯಿತು.
ಸಭೆಯನ್ನುದ್ದೇಶಿಸಿ ಮಾತನಾಡಿದ ಕರಾವಳಿ ಹೈಕೋರ್ಟ್ ಪೀಠ ಹೋರಾಟ ಸಮಿತಿ, ಉಡುಪಿ ಜಿಲ್ಲೆಯ ಸಂಚಾಲಕ ಹಾಗೂ ನ್ಯಾಯವಾದಿ ಪ್ರೇಮ್ ಪ್ರಸಾದ್ ಶೆಟ್ಟಿ, ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗಾಗಿ ಜಿಲ್ಲಾ ಹೋರಾಟ ಸಮಿತಿಯು ಈಗಾಗಲೇ ಉಡುಪಿಯಲ್ಲಿ ಜಿಲ್ಲಾ ಮಟ್ಟದ ವಿವಿಧ ಸಂಘ-ಸಂಸ್ಥೆಗಳ ಹಕ್ಕೊತ್ತಾಯ ಸಭೆ ನಡೆಸಿದೆ. ಬಳಿಕ ಕಳೆದ ಎರಡು-ಮೂರು ತಿಂಗಳುಗಳಿಂದ ಕುಂದಾಪುರ, ಬೈಂದೂರು ಹಾಗೂ ಬ್ರಹ್ಮಾವರ ತಾಲೂಕುಗಳಲ್ಲಿಯೂ ನಿರಂತರವಾಗಿ ಸಭೆಗಳನ್ನು ಆಯೋಜಿಸಿ ಜನಜಾಗೃತಿ ಮೂಡಿಸಲಾಗಿದೆ ಎಂದರು.
ಸೆಪ್ಟೆಂಬರ್ 29, 2026ರಂದು ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳು ಈ ಬೇಡಿಕೆಯ ಪರಿಶೀಲನೆಗಾಗಿ ತ್ರಿಸದಸ್ಯ ನ್ಯಾಯಮೂರ್ತಿಗಳ ಸಮಿತಿ ರಚಿಸಿರುವುದು ಹೋರಾಟದ ಮೊದಲ ಯಶಸ್ಸಿನ ಹೆಜ್ಜೆಯಾಗಿದೆ. ಇದೀಗ ಕಾರ್ಕಳ ತಾಲೂಕಿನ ವಕೀಲರು, ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಹಾಗೂ ಸಾಮಾಜಿಕ ಕಾರ್ಯಕರ್ತರನ್ನು ಒಳಗೊಂಡಂತೆ ಹಕ್ಕೊತ್ತಾಯ ಸಭೆ ಆಯೋಜಿಸಲಾಗುತ್ತಿದೆ ಎಂದು ತಿಳಿಸಿದರು.

ಕಾರ್ಕಳ ವಕೀಲರ ಸಂಘದ ಅಧ್ಯಕ್ಷ ಪ್ರಕಾಶ್ ಆಚಾರ್ ಮಾತನಾಡಿ, ತಾಲೂಕು ಮಟ್ಟದ ಹಕ್ಕೊತ್ತಾಯ ಸಭೆಯನ್ನು ಯಶಸ್ವಿಗೊಳಿಸಲು ವಕೀಲರ ಸಂಘ ಸಂಪೂರ್ಣ ಸಹಕಾರ ನೀಡಲಿದೆ. ಕರಾವಳಿ ಭಾಗದಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಯ ಮಹತ್ವದ ಹೋರಾಟಕ್ಕೆ ತಾಲೂಕಿನ ಎಲ್ಲ ಸಂಘ-ಸಂಸ್ಥೆಗಳು ಕೈಜೋಡಿಸಬೇಕು ಎಂದು ಮನವಿ ಮಾಡಿದರು.
ಸಭೆಯಲ್ಲಿ ವಕೀಲರ ಸಂಘದ ಮಾಜಿ ಅಧ್ಯಕ್ಷ ಹಾಗೂ ಹಿರಿಯ ನ್ಯಾಯವಾದಿ ಸುನಿಲ್ ಕುಮಾರ್ ಶೆಟ್ಟಿ, ಶೇಖರ್ ಮಡಿವಾಳ, ಸದಾನಂದ ಸಾಲಿಯಾನ್, ರವೀಂದ್ರ ಮೊಯಿಲಿ, ಹಿರಿಯ ನಾಗರಿಕರ ವೇದಿಕೆಯ ಅಧ್ಯಕ್ಷ ಕಮಲಾಕ್ಷ ಕಾಮತ್, ರಾಜಕೀಯ ಮುಖಂಡ ಶುಭದ ರಾವ್, ನಿವೃತ್ತ ಪ್ರಾಂಶುಪಾಲೆ ಮಿತ್ರಪ್ರಭಾ ಹೆಗ್ಡೆ, ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಪ್ರಭಾಕರ್ ಶೆಟ್ಟಿ ಕೊಂಡಳ್ಳಿ, ಆಟೋರಿಕ್ಷಾ ಚಾಲಕರ ಸಂಘದ ಅಧ್ಯಕ್ಷರು, ಮಾಜಿ ಕೌನ್ಸಿಲರ್ ಅವಿನಾಶ್ ಜಿ. ಶೆಟ್ಟಿ ಸೇರಿದಂತೆ ವಿವಿಧ ಸಂಘ-ಸಂಸ್ಥೆಗಳ ಪ್ರತಿನಿಧಿಗಳು ಉಪಸ್ಥಿತರಿದ್ದರು.
ಸಭೆಯಲ್ಲಿ ಪಾಲ್ಗೊಂಡವರು ತಮ್ಮ ಸಲಹೆ-ಸೂಚನೆಗಳನ್ನು ನೀಡುವುದರೊಂದಿಗೆ ಹೋರಾಟಕ್ಕೆ ಸಂಪೂರ್ಣ ಬೆಂಬಲ ವ್ಯಕ್ತಪಡಿಸಿದರು. ಕಾರ್ಯದರ್ಶಿ ಪದ್ಮಪ್ರಸಾದ್ ಜೈನ್ ಸ್ವಾಗತಿಸಿ, ಹರೀಶ್ ಅಧಿಕಾರಿ ವಂದಿಸಿದರು.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.