


ಮಂಗಳೂರು: ಬೀಚ್‌ನಲ್ಲಿ ಪ್ರೇಮಿಗಳಿಗೆ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಯುವಕನೊಬ್ಬ ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ತನ್ನ ನಿವಾಸದಲ್ಲಿ ಮಂಗಳವಾರ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಪೊಲೀಸ್ ಮೂಲಗಳ ಪ್ರಕಾರ, ಅಕ್ಟೋಬರ್ 25ರ ಭಾನುವಾರ ರಾತ್ರಿ ಬೀಚ್‌ನಲ್ಲಿ ಜೋಡಿಯೊಂದನ್ನು ತಡೆದು ನಿಲ್ಲಿಸಿ ಯುವಕರ ಗುಂಪೊಂದು ಕಿರುಕುಳ ನೀಡಿತ್ತು ಎನ್ನಲಾಗಿದೆ. ಈ ಸಂಬಂಧ ಬಂದ ದೂರಿನ ಆಧಾರದ ಮೇಲೆ ಸುರತ್ಕಲ್ ಪೊಲೀಸರು ಯುವಕ ಸೇರಿದಂತೆ ಹಲವರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದರು.
ಆರೋಪಿತ ಅಪರಾಧಕ್ಕೆ ಮೂರು ವರ್ಷಕ್ಕಿಂತ ಕಡಿಮೆ ಅವಧಿಯ ಶಿಕ್ಷೆ ವಿಧಿಸಲು ಅವಕಾಶವಿರುವ ಹಿನ್ನೆಲೆಯಲ್ಲಿ, ಕಾನೂನು ಪ್ರಕ್ರಿಯೆಯಂತೆ ಪೊಲೀಸರು ಯುವಕನನ್ನು ಬಂಧಿಸದೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದರು ಎಂದು ವರದಿಯಾಗಿದೆ.
ಮಂಗಳವಾರ ಬೆಳಗ್ಗೆ ಯುವಕ ಮನೆಯ ಕೋಣೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ. ಕುಟುಂಬಸ್ಥರು ತಕ್ಷಣ ಆಸ್ಪತ್ರೆಗೆ ಕರೆದೊಯ್ದರೂ, ಆತ ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದ್ದಾರೆ.
ಘಟನಾ ಸ್ಥಳದಲ್ಲಿ ಡೆತ್‌ನೋಟ್ ಪತ್ತೆಯಾಗಿದ್ದು, ಅದರಲ್ಲಿ ತನ್ನ ಸಾವಿಗೆ ಯಾರೂ ಕಾರಣರಲ್ಲ ಹಾಗೂ ತನ್ನ ನಿರ್ಧಾರಕ್ಕೆ ತಾನೇ ಹೊಣೆ ಎಂದು ಯುವಕ ಬರೆದಿಟ್ಟಿದ್ದಾನೆ ಎನ್ನಲಾಗಿದೆ.
ಸ್ಥಳಕ್ಕೆ ಭೇಟಿ ನೀಡಿದ ಸುರತ್ಕಲ್ ಪೊಲೀಸರು ಪರಿಶೀಲನೆ ನಡೆಸಿ, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಈ ಸಂಬಂಧ ಅಸಹಜ ಸಾವು ಪ್ರಕರಣ ದಾಖಲಿಸಿಕೊಂಡಿದ್ದು, ಮುಂದಿನ ತನಿಖೆ ಮುಂದುವರಿದಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.