

ಮಂಗಳೂರು: ಜೋಕಟ್ಟೆ ಸಮೀಪದ ಮಂಗಳೂರು ರಿಫೈನರಿ ಅಂಡ್ ಪೆಟ್ರೋ ಕೆಮಿಕಲ್ಸ್ ಲಿಮಿಟೆಡ್ (ಎಂಆರ್‌ಪಿಎಲ್) ಘಟಕದ ‘ಕೋಕರ್ ಹೈಡ್ರೋಟ್ರೀಟರ್’ (CHT) ವಿಭಾಗದಲ್ಲಿ ಬುಧವಾರ ಭಾರೀ ಸ್ಫೋಟ ಸಂಭವಿಸಿದೆ. ಸ್ಫೋಟದ ಬಳಿಕ ಸುತ್ತಮುತ್ತಲಿನ ಪ್ರದೇಶದಲ್ಲಿ ದಟ್ಟ ಹೊಗೆ ಆವರಿಸಿದ್ದು, ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು.
ಸ್ಫೋಟ ಸಂಭವಿಸುತ್ತಿದ್ದಂತೆ ಘಟಕದಲ್ಲಿದ್ದ ಸಿಬ್ಬಂದಿಯನ್ನು ಸುರಕ್ಷಿತವಾಗಿ ಹೊರಗೆ ಕರೆತರಲಾಗಿದೆ. ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ಸಂಪೂರ್ಣವಾಗಿ ನಿಯಂತ್ರಣಕ್ಕೆ ತಂದಿದ್ದಾರೆ. ಸದ್ಯ ಪರಿಸ್ಥಿತಿ ನಿಯಂತ್ರಣದಲ್ಲಿದ್ದು, ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ ಎಂದು ಎಂಆರ್‌ಪಿಎಲ್ ಸಾರ್ವಜನಿಕ ಸಂಪರ್ಕಾಧಿಕಾರಿ (ಪಿಆರ್‌ಒ) ಡಾ. ರೂಡಾಲ್ಫ್ ತಿಳಿಸಿದ್ದಾರೆ.
ಘಟನೆಯಲ್ಲಿ ಇಬ್ಬರಿಗೆ ಗಾಯಗಳಾಗಿವೆ. ರಾಜೇಶ್ ಬಾಪ್ಟಿಸ್ಟ್ ಎಂಬುವರಿಗೆ ಸುಮಾರು ಶೇ.35ರಷ್ಟು ಸುಟ್ಟ ಗಾಯಗಳಾಗಿದ್ದು, ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅಪಾಯದಿಂದ ಪಾರಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.
ಇನ್ನು ಘಟಕದ ಪಕ್ಕದ ಕಚೇರಿಯಲ್ಲಿದ್ದ ಆರು ಮಂದಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅವರಿಗೆ ಹೊರರೋಗಿ ವಿಭಾಗದಲ್ಲಿ ಚಿಕಿತ್ಸೆ ಹಾಗೂ ತಪಾಸಣೆ ನಡೆಸಲಾಗಿದೆ.
ಸ್ಫೋಟದ ಶಬ್ದಕ್ಕೆ ಕಂಪಿಸಿದ ಕಟ್ಟಡಗಳು
ಸ್ಫೋಟದ ತೀವ್ರತೆಗೆ ಎಂಆರ್‌ಪಿಎಲ್ ಸುತ್ತಮುತ್ತಲಿನ ಬಜ್ಜೆ, ಕಳವಾರು, ಬೈಕಂಪಾಡಿ, ಜೋಕಟ್ಟೆ, ಸುರತ್ಕಲ್ ಹಾಗೂ ಕಾಟಿಪಳ್ಳ ಪ್ರದೇಶಗಳಲ್ಲಿ ಭೂಕಂಪದ ರೀತಿಯ ಅನುಭವವಾಗಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಸ್ಫೋಟದ ಭಾರೀ ಶಬ್ದ ಬೈಕಂಪಾಡಿ ಹಾಗೂ ಸುರತ್ಕಲ್‌ವರೆಗೂ ಕೇಳಿಬಂದಿದೆ.
ಮಂಗಳೂರು ವಿಮಾನ ನಿಲ್ದಾಣದ ಸುತ್ತಮುತ್ತಲೂ ದಟ್ಟ ಹೊಗೆ ಕಾಣಿಸಿಕೊಂಡಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಜೋಕಟ್ಟೆ ಪಂಚಾಯತ್ ಕಟ್ಟಡ ಸೇರಿದಂತೆ ಸುತ್ತಮುತ್ತಲಿನ ಕೆಲವು ಮನೆಗಳು ಹಾಗೂ ಕಟ್ಟಡಗಳು ಕಂಪಿಸಿದ್ದು, ಕೆಲವೆಡೆ ಬಿರುಕುಗಳು ಕಾಣಿಸಿಕೊಂಡಿವೆ. ಕೆಲವು ಮನೆಗಳ ಬಾಗಿಲು ಹಾಗೂ ಕಿಟಕಿಗಳಿಗೆ ಹಾನಿಯಾಗಿರುವುದಾಗಿ ಸ್ಥಳೀಯರು ತಿಳಿಸಿದ್ದಾರೆ.
ಸ್ಫೋಟದ ಬಳಿಕ ಆತಂಕಗೊಂಡ ಜನರು ಮನೆಗಳಿಂದ ಹೊರಗೆ ಓಡಿ ಬಂದಿದ್ದು, ಜೋಕಟ್ಟೆ ಪಂಚಾಯತ್ ಕಟ್ಟಡದ ಬಳಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ಜಮಾಯಿಸಿದ್ದರು.
ಮಂಗಳೂರು ಹಾಗೂ ಪಾಂಡೇಶ್ವರ ಸೇರಿದಂತೆ ವಿವಿಧ ಪ್ರದೇಶಗಳಿಂದ ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಧಾವಿಸಿ ಕಾರ್ಯಾಚರಣೆ ನಡೆಸಿವೆ. ಘಟನೆಯ ನಿಖರ ಕಾರಣ ಹಾಗೂ ಹಾನಿಯ ಪ್ರಮಾಣದ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.