


ಬೆಳಗಾವಿ: ಪುನೀತ್ ರಾಜ್ ಕುಮಾರ್ ಹೃದಯ ಜ್ಯೋತಿ ಯೋಜನೆಯನ್ನು ರಾಜ್ಯದ ಎಲ್ಲಾ ತಾಲೂಕುಗಳಿಗೂ ವಿಸ್ತರಣೆ ಮಾಡಲು ರಾಜ್ಯ ಸರ್ಕಾರ ಚಿಂತನೆ ನಡೆಸುತ್ತಿದೆ.
ಬೆಳಗಾವಿಯಲ್ಲಿ ಮಾತನಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು, ರಾಜ್ಯದ ಎಲ್ಲಾ ತಾಲೂಕುಗಳಿಗೂ ಪುನೀತ್ ರಾಜ್ ಕುಮಾರ್ ಹೃದಯ ಜ್ಯೋತಿ ಯೋಜನೆ ವಿಸ್ತರಣೆ ಮಾಡಲು ಚಿಂತನೆ ನಡೆಸಲಾಗುತ್ತಿದೆ, ಅದರಂತೆ ಡಯಾಲಿಸಿಸ್ ಕೇಂದ್ರಗಳನ್ನು ಬದಲಾವಣೆ ಮಾಡಲಾಗಿದ್ದು, ಇದಕ್ಕೆ ಶೀಘ್ರದಲ್ಲೇ ಮುಖ್ಯಮಂತ್ರಿಗಳು ಚಾಲನೆ ನೀಡಲಿದ್ದಾರೆ ಎಂದು ಹೇಳಿದರು.
ಎಲ್ಲಾ ಜಿಲ್ಲಾಕೇಂದ್ರಗಳಲ್ಲಿ ಟೇಕ್ ಕೇರ್ ಕೀಮೋಥೆರಪಿ ಆರಂಭಿಸಲಾಗುತ್ತಿದೆ. ಪುನೀತ್ ರಾಜ್‌ಕುಮಾರ್ ಹೃದಯಜ್ಯೋತಿ ಯೋಜನೆಯಡಿ ಹೃದಯಾಘಾತದ ಸಂದರ್ಭದಲ್ಲಿ 25,000 ರೂ. ಮೌಲ್ಯದ ಜೀವರಕ್ಷಕ ಇಂಜೆಕ್ಷನ್ ಉಚಿತವಾಗಿ ನೀಡಲಾಗುತ್ತಿದೆ. 1 ಮತ್ತು 2 ನೇ ಹಂತದಲ್ಲಿ 15 ಜಿಲ್ಲೆಗಳ 70 ತಾಲೂಕು ಆಸ್ಪತ್ರೆಗಳಲ್ಲಿ ಈ ಯೋಜನೆ ಜಾರಿಯಾಗಿದ್ದು, 3 ಮತ್ತು 4 ನೇ ಹಂತದಲ್ಲಿ ಉಳಿದ 16 ಜಿಲ್ಲೆಗಳ ಎಲ್ಲಾ ತಾಲೂಕುಗಳಲ್ಲಿ ಪುನೀತ್ ರಾಜ್‌ಕುಮಾರ್ ಹೃದಯಜ್ಯೋತಿ ಯೋಜನೆ ವಿಸ್ತರಣೆ ಮಾಡಲಾಗುವುದು ಎಂದು ತಿಳಿಸಿದರು.
ರಾಜ್ಯದ ಕೆಲವು ಭಾಗಗಳಲ್ಲಿ ಹರಡುತ್ತಿದ್ದ ಕ್ಯಾಸನೂರು ಫಾರೆಸ್ಟ್ ಡಿಸೀಸ್ (ಕೆಎಫ್‌ಡಿ)ನ್ನು ಸಾಮಾನ್ಯವಾಗಿ ಮಂಗನ ಜ್ವರ ಎಂದು ಕರೆಯಲಾಗುತ್ತದೆ, ಇದನ್ನು ನಿಯಂತ್ರಿಸಲು ಸರ್ಕಾರ ಸಾಧ್ಯವಿರುವ ಎಲ್ಲಾ ಕ್ರಮಗಳನ್ನು ಕೈಗೊಂಡಿದೆ. ಕಾಯಿಲೆಗೆ ಉಚಿತವಾಗಿ ಚಿಕಿತ್ಸೆ ನೀಡಲಾಗುತ್ತಿದೆ. ಎಪಿಎಲ್ ಕಾರ್ಡ್ ಹೊಂದಿರುವವರಿಗೂ ಉಚಿತ ಚಿಕಿತ್ಸೆ ನೀಡಲಾಗುತ್ತಿದೆ. ರಾಜ್ಯದಲ್ಲಿ ಕೆಎಫ್‌ಡಿ ಬಾಧಿತ ಎಪಿಎಲ್ ಕುಟುಂಬದ ಸದಸ್ಯರಿಗೆ ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ಅಡಿ ನೋಂದಾಯಿಸಿಕೊಂಡಿರುವವರಿಗೆ ಉಚಿತ ಚಿಕಿತ್ಸೆ ದೊರೆಯಲಿದೆ ಎಂದು ಮಾಹಿತಿ ನೀಡಿದರು.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.