



ಉಡುಪಿ : ರಕ್ತದಾನದಿಂದ ಪ್ರಾಣಾಪಾಯದಲ್ಲಿರುವ ಇನ್ನೊಬ್ಬರ ಜೀವ ಉಳಿಸಲು ಸಾಧ್ಯವಾಗುತ್ತದೆ ಎಂದು ಡಾ.ಟಿ.ಎಂ.ಎ ಪೈ ಪಾಲಿಟೆಕ್ನಿಕ್‌ನ ನಿರ್ದೇಶಕ ಟಿ. ರಂಗ ಪೈ ಹೇಳಿದರು.
ಅವರು ಇಂದು ನಗರದ ಮಣಿಪಾಲ ಎಂ.ಐ.ಟಿ ಕ್ಯಾಂಪಸ್‌ನ ಡಾ. ಟಿ.ಎಂ.ಎ ಪೈ ಪಾಲಿಟೆಕ್ನಿಕ್ ಸಭಾಂಗಣದಲ್ಲಿ, ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ನಿಯಂತ್ರಣ ಹಾಗೂ ತಡೆಗಟ್ಟುವ ಘಟಕ, ಲಯನ್ಸ್ ಕ್ಲಬ್ ಉಡುಪಿ ಲಕ್ಷö್ಯ, ಅಭಯಹಸ್ತ ಚಾರಿಟೇಬಲ್ ಟ್ರಸ್ಟ್ (ರಿ) ಉಡುಪಿ, ರಕ್ತನಿಧಿ ಕೇಂದ್ರ ಕೆ.ಎಂ.ಸಿ ಮಣಿಪಾಲ ಹಾಗೂ ಡಾ.ಟಿ.ಎಂ.ಎ ಪೈ ಪಾಲಿಟೆಕ್ನಿಕ್ ಎಂ.ಐ.ಟಿ ಕ್ಯಾಂಪಸ್ ಮಣಿಪಾಲ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ರಾಷ್ಟ್ರೀಯ ಸ್ವಯಂ ಪ್ರೇರಿತ ರಕ್ತದಾನ ದಿನಾಚರಣೆ - ಬೃಹತ್ ಸ್ವಯಂಪ್ರೇರಿತ ರಕ್ತದಾನ ಶಿಬಿರ ಮತ್ತು ಅತಿ ಹೆಚ್ಚು ಬಾರಿ ರಕ್ತದಾನ ಮಾಡಿರುವ ದಾನಿಗಳಿಗೆ ಸನ್ಮಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ರಕ್ತದಾನವು ಮಾನವೀಯ ದೃಷ್ಠಿಯಿಂದ ಸ್ವಯಂ ಪ್ರೇರಿತರಾಗಿ ಮಾಡುವ ಕಾರ್ಯವಾಗಿದ್ದು, ಇದರಿಂದಾಗಿ ಹಲವು ಜೀವಗಳನ್ನು ರಕ್ಷಿಸಬಹುದಾಗಿದೆ.
ಶಾಲಾ-ಕಾಲೇಜುಗಳಲ್ಲಿನ ಶಿಕ್ಷಣವು ವಿದ್ಯಾರ್ಥಿಗಳನ್ನು ಪರಿಪೂರ್ಣ ವ್ಯಕ್ತಿಯನ್ನಾಗಿ ಮಾಡಲು ಸಾಧ್ಯವಿಲ್ಲ. ಶಿಕ್ಷಣದೊಂದಿಗೆ ಸಂಸ್ಕಾರವನ್ನು ಬೆಳೆಸಿ, ಮಾನವೀಯ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವುದರಿಂದ ಇದು ಸಾಧ್ಯ. ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಮನಸ್ಪೂರ್ತಿಯಾಗಿ ಕಾಯಕದಲ್ಲಿ ತೊಡಗಿಸಿಕೊಳ್ಳಬೇಕು ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಮಣಿಪಾಲ ಎಮ್.ಎಸ್.ಡಿ.ಸಿ ಅಧ್ಯಕ್ಷ ಹಾಗೂ ರಿಜಿಸ್ಟಾçರ್ ಡಾ. ರಾಧಾಕೃಷ್ಣ ಎಸ್ ಐತಾಳ್ ಮಾತನಾಡಿ, ವಿದ್ಯಾರ್ಥಿಗಳು ರಕ್ತದಾನ ಶಿಬಿರದಲ್ಲಿ ಸಕ್ರೀಯವಾಗಿ ಭಾಗವಹಿಸಿ, ಸ್ವಯಂ ಪ್ರೇರಣೆಯಿಂದ ರಕ್ತದಾನ ಮಾಡಿ, ಆರೋಗ್ಯವಂತ ಜೀವನ ಹೊಂದುವಂತೆ ಹಾಗೂ ಸಮಾಜಸೇವೆಯಂತಹ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವಂತೆ ಕರೆ ನೀಡಿದರು.
ಜಿಲ್ಲಾ ಏಡ್ಸ್ ನಿಯಂತ್ರಣಾಧಿಕಾರಿ ಡಾ. ಚಿದಾನಂದ ಸಂಜು ಎಸ್ ಪ್ರಾಸ್ತಾವಿಕವಾಗಿ ಮಾತನಾಡಿ, ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡಲು ಸಾರ್ವಜನಿಕರಲ್ಲಿ ಅರಿವು ಮೂಡಿಸುವುದು ಆರೋಗ್ಯ ಇಲಾಖೆಯ ಜವಾಬ್ದಾರಿಯಾಗಿದೆ. ಪ್ರತಿಯೊಬ್ಬರೂ ಚಿಕ್ಕಂದಿನಿಂದಲೇ ರಕ್ತದಾನ ಶಿಬಿರಗಳಲ್ಲಿ ಭಾಗವಹಿಸಬೇಕು. ಒಂದು ಯೂನಿಟ್ ರಕ್ತದಿಂದ 4 ಜನರ ಜೀವವನ್ನು ಉಳಿಸಬಹುದಾಗಿದೆ. ಗ್ರಾಮೀಣ ಭಾಗಗಳಲ್ಲಿ ಆಶಾ ಕಾರ್ಯಕರ್ತೆಯರು, ಪ್ರಾಥಮಿಕ ಆರೋಗ್ಯ ಕೇಂದ್ರಗಳ ಸಿಬ್ಬಂದಿಗಳ ಮೂಲಕ ಸಾರ್ವಜನಿಕರಿಗೆ ರಕ್ತದಾನ ಅಭಿಯಾನದಲ್ಲಿ ಭಾಗವಹಿಸುವಂತೆ ಅವರುಗಳಲ್ಲಿ ಅರಿವು ಮೂಡಿಸಬೇಕು ಎಂದರು.
ಅತಿ ಹೆಚ್ಚು ಬಾರಿ ರಕ್ಷದಾನ ಮಾಡಿದ 6 ಮಂದಿ ದಾನಿಗಳನ್ನು ಈ ಸಂದರ್ಭದಲ್ಲಿ ಸನ್ಮಾನಿಸಲಾಯಿತು. ವಿದ್ಯಾರ್ಥಿಗಳು ರಕ್ತದಾನ ಶಿಬಿರದಲ್ಲಿ ಭಾಗವಹಿಸಿ, ರಕ್ತದಾನ ಮಾಡಿದರು.
ಕಾರ್ಯಕ್ರಮದಲ್ಲಿ ಕೆ.ಎಂ.ಸಿ ರಕ್ತನಿಧಿ ಕೇಂದ್ರದ ಮುಖ್ಯಸ್ಥೆ ಡಾ. ಶಮ್ಮಿ ಶಾಸ್ತಿç, ಲಯನ್ಸ್ ಕ್ಲಬ್ ಉಡುಪಿ ಲಕ್ಷ್ಯ ಅಧ್ಯಕ್ಷ ಧನುಷ್ ಕೆ, ಡಾ.ಟಿ.ಎಂ.ಎ ಪೈ ಪಾಲಿಟೆಕ್ನಿಕ್‌ನ ಪ್ರಾಂಶುಪಾಲ ಪ್ರೊ. ಏ.ಎನ್. ಕಾಂತರಾಜ್, ಅಭಯಹಸ್ತ ಚಾರಿಟೇಬಲ್ ಟ್ರಸ್ಟ್ (ರಿ) ಅಧ್ಯಕ್ಷ ಸತೀಶ್ ಸಾಲ್ಯಾನ್, ಕಾಲೇಜಿನ ಅಧ್ಯಾಪಕರುಗಳು, ವಿದ್ಯಾರ್ಥಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.
ವಿದ್ಯಾರ್ಥಿನಿ ಪೃಥ್ವಿ ಸ್ವಾಗತಿಸಿ, ಮಹಾಬಲೇಶ್ ನಿರೂಪಿಸಿ, ಕಿಶನ್ ವಂದಿಸಿದರು.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.