

ಬೆಂಗಳೂರು: ವಿಧಾನಮಂಡಲ ಅಧಿವೇಶನ ಮುಗಿದ ಬೆನ್ನಲ್ಲೇ ರಾಜ್ಯ ಸಚಿವ ಸಂಪುಟದಲ್ಲಿ ದೊಡ್ಡ ಮಟ್ಟದ ಬದಲಾವಣೆಯ ಸುಳಿವು ದೊರೆತಿದೆ. ಕನಿಷ್ಠ ಮೂರರಿಂದ ಐದು ಸಚಿವರನ್ನು ಸಂಪುಟದಿಂದ ಕೈಬಿಟ್ಟು, ಹೊಸ ಮುಖಗಳಿಗೆ ಅವಕಾಶ ನೀಡುವ ಸಾಧ್ಯತೆ ಇದೆ ಎಂಬ ಚರ್ಚೆ ರಾಜಕೀಯ ವಲಯದಲ್ಲಿ ತೀವ್ರಗೊಂಡಿದೆ.
ಸಂಪುಟ ಪುನಾರಚನೆ ಕುರಿತು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕಾಂಗ್ರೆಸ್ ಹೈಕಮಾಂಡ್ ನಾಯಕರೊಂದಿಗೆ ಗಂಭೀರ ಚರ್ಚೆ ನಡೆಸಲಿದ್ದಾರೆ ಎನ್ನಲಾಗಿದೆ. ನಾಳೆ ದೆಹಲಿಗೆ ತೆರಳಲಿರುವ ಸಿಎಂ, ಪಕ್ಷದ ವರಿಷ್ಠರನ್ನು ಭೇಟಿಯಾಗಿ ಸಂಪುಟ ಬದಲಾವಣೆ ಕುರಿತು ಚರ್ಚಿಸುವ ಸಾಧ್ಯತೆ ಇದೆ.
ಸಂಪುಟದಲ್ಲಿರುವ ಮೂರರಿಂದ ನಾಲ್ಕು ಹಿರಿಯ ಸಚಿವರನ್ನು ಕೈಬಿಡುವ ಕುರಿತು ಹೈಕಮಾಂಡ್ ಮಟ್ಟದಲ್ಲಿ ಚರ್ಚೆ ನಡೆಯುತ್ತಿದೆ ಎಂಬ ಮಾಹಿತಿ ರಾಜಕೀಯ ವಲಯದಲ್ಲಿ ಹರಿದಾಡುತ್ತಿದೆ.
ಸಚಿವ ಸ್ಥಾನ ಹಂಚಿಕೆಯ ಬಳಿಕ ಕಾಂಗ್ರೆಸ್‌ನಲ್ಲಿ ಅಸಮಾಧಾನ ಮುಂದುವರಿದಿದ್ದು, ಹಲವು ಶಾಸಕರು ಹಾಗೂ ಸಚಿವ ಸ್ಥಾನದ ಆಕಾಂಕ್ಷಿಗಳು ಬಹಿರಂಗವಾಗಿಯೇ ಅಸಮಾಧಾನ ವ್ಯಕ್ತಪಡಿಸಿದ್ದರು. ಕೆಲವರು ರಾಜೀನಾಮೆ ನೀಡುವ ಎಚ್ಚರಿಕೆಯನ್ನೂ ನೀಡಿದ್ದರು ಎನ್ನಲಾಗಿದೆ.
ಇದೇ ಹಿನ್ನೆಲೆಯಲ್ಲಿ ಸಂಪುಟ ಪುನಾರಚನೆ ಮೂಲಕ ಅಸಮಾಧಾನಗೊಂಡಿರುವ ಶಾಸಕರನ್ನು ಸಮಾಧಾನಪಡಿಸುವ ಹಾಗೂ ಪಕ್ಷದೊಳಗಿನ ಭಿನ್ನಮತಕ್ಕೆ ಕಡಿವಾಣ ಹಾಕುವ ತಂತ್ರವನ್ನು ಕಾಂಗ್ರೆಸ್ ರೂಪಿಸುತ್ತಿದೆ ಎನ್ನಲಾಗಿದೆ.
ಕೆಲವು ಹಿರಿಯ ನಾಯಕರು ಸಚಿವ ಸ್ಥಾನಕ್ಕಾಗಿ ಪಟ್ಟು ಹಿಡಿದಿದ್ದು, ಮತ್ತೊಂದೆಡೆ ಸಂಪುಟದಿಂದ ಕೈಬಿಡಲಾಗುತ್ತದೆ ಎಂಬ ಚರ್ಚೆಯಿಂದ ಕೆಲವು ಸಚಿವರು ಅಸಮಾಧಾನಗೊಂಡಿದ್ದಾರೆ ಎನ್ನಲಾಗಿದೆ. ಹೀಗಾಗಿ ಸಂಪುಟ ಪುನಾರಚನೆ ಮೂಲಕ ಎರಡೂ ಬಣಗಳನ್ನು ಸಮತೋಲನಗೊಳಿಸುವ ಪ್ರಯತ್ನ ನಡೆಯಬಹುದು ಎಂಬ ಮಾತು ಕೇಳಿಬರುತ್ತಿದೆ.
ಅಧಿವೇಶನ ಮುಗಿದ ಬಳಿಕ ಇಬ್ಬರಿಗೆ ಪ್ರಮುಖ ಜವಾಬ್ದಾರಿ ನೀಡುವ ಕುರಿತು ಸಿಎಂ ಡಿ.ಕೆ. ಶಿವಕುಮಾರ್ ಈಗಾಗಲೇ ಮಾತನಾಡಿದ್ದಾರೆ ಎನ್ನಲಾಗಿದ್ದು, ಸಚಿವ ಸ್ಥಾನಕ್ಕಾಗಿ ಕಾಯುತ್ತಿರುವ ಆಕಾಂಕ್ಷಿಗಳ ನಿರೀಕ್ಷೆ ಮತ್ತಷ್ಟು ಹೆಚ್ಚಾಗಿದೆ.
ಆದರೆ, ಸಂಪುಟ ಪುನಾರಚನೆ ಕುರಿತು ಅಂತಿಮ ನಿರ್ಧಾರವನ್ನು ಹೈಕಮಾಂಡ್ ಜೊತೆಗಿನ ಚರ್ಚೆಯ ಬಳಿಕವೇ ಕೈಗೊಳ್ಳುವ ಸಾಧ್ಯತೆ ಇದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.