


ಬೆಂಗಳೂರು: ಜುಲೈ 7ರಿಂದ 11ರವರೆಗೆ ರಾಜ್ಯದ ಘಟ್ಟ ಪ್ರದೇಶಗಳ ಕೆಲವು ಭಾಗಗಳಲ್ಲಿ ಭೂಕುಸಿತ ಸಂಭವಿಸುವ ಸಾಧ್ಯತೆ ಇರುವುದಾಗಿ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಈಗಾಗಲೇ ಸುರಿಯುತ್ತಿರುವ ನಿರಂತರ ಮಳೆಯಿಂದಾಗಿ ಗುಡ್ಡಗಾಡು ಪ್ರದೇಶಗಳಲ್ಲಿ ಅಪಾಯ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಸ್ಥಳೀಯರು ಹಾಗೂ ಪ್ರವಾಸಿಗರು ಎಚ್ಚರಿಕೆಯಿಂದ ಇರಬೇಕೆಂದು ಸೂಚಿಸಲಾಗಿದೆ.
ರಾಜ್ಯದಲ್ಲಿ ಮುಂಗಾರು ಮಳೆ ಮತ್ತೆ ಚುರುಕುಗೊಂಡಿದ್ದು, ಮುಂದಿನ ಕೆಲವು ದಿನಗಳ ಕಾಲ ವ್ಯಾಪಕ ಮಳೆಯಾಗುವ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ (IMD) ನೀಡಿದೆ. ಅದರಲ್ಲೂ ಉಡುಪಿ, ಉತ್ತರ ಕನ್ನಡ ಹಾಗೂ ಶಿವಮೊಗ್ಗ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದ್ದು, ಸಾರ್ವಜನಿಕರು ತೀವ್ರ ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.
ಹವಾಮಾನ ಇಲಾಖೆ ಮಾಹಿತಿ ಪ್ರಕಾರ, ಈ ಮೂರು ಜಿಲ್ಲೆಗಳಲ್ಲಿ ಗಂಟೆಗೆ 50 ರಿಂದ 60 ಕಿ.ಮೀ. ವೇಗದಲ್ಲಿ ಬಿರುಗಾಳಿ ಬೀಸುವ ಸಾಧ್ಯತೆಯಿದ್ದು, ಕೆಲವೆಡೆ 204.5 ಮಿ.ಮೀ.ಗಿಂತ ಅಧಿಕ ಮಳೆಯಾಗುವ ಸಾಧ್ಯತೆಯಿದೆ.
ಇತರ ಜಿಲ್ಲೆಗಳಿಗೂ ಆರೆಂಜ್ ಅಲರ್ಟ್
ರೆಡ್ ಅಲರ್ಟ್ ಜಿಲ್ಲೆಗಳ ಹೊರತಾಗಿ ರಾಜ್ಯದ ಹಲವು ಭಾಗಗಳಿಗೂ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಉತ್ತರ ಒಳನಾಡು: ಜುಲೈ 6 ಮತ್ತು 7ರಂದು ಭಾರಿ ಮಳೆ ಸಾಧ್ಯತೆ.
ದಕ್ಷಿಣ ಒಳನಾಡು: ಜುಲೈ 7 ಮತ್ತು 8ರಂದು ವ್ಯಾಪಕ ಮಳೆಯ ಮುನ್ಸೂಚನೆ.
ಕರಾವಳಿ ಜಿಲ್ಲೆಗಳು: ಜುಲೈ 8ರಂದು ಭಾರೀ ಮಳೆಯ ಎಚ್ಚರಿಕೆ.
ಈ ಪ್ರದೇಶಗಳಲ್ಲಿ 64.5 ಮಿ.ಮೀ.ಯಿಂದ 204.4 ಮಿ.ಮೀ.ವರೆಗೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಅಗತ್ಯವಿದ್ದರೆ ಮಾತ್ರ ಪ್ರಯಾಣ
ಭಾರಿ ಮಳೆಯ ಮುನ್ಸೂಚನೆಯ ಹಿನ್ನೆಲೆಯಲ್ಲಿ ಮುಂದಿನ ನಾಲ್ಕೈದು ದಿನಗಳ ಕಾಲ ಘಟ್ಟ ರಸ್ತೆಗಳು, ನದಿ ತೀರಗಳು ಹಾಗೂ ಭೂಕುಸಿತ ಸಂಭವಿಸುವ ಸಾಧ್ಯತೆ ಇರುವ ಪ್ರದೇಶಗಳಿಗೆ ಅನಗತ್ಯವಾಗಿ ಪ್ರಯಾಣಿಸದಂತೆ ಅಧಿಕಾರಿಗಳು ಸಲಹೆ ನೀಡಿದ್ದಾರೆ. ಸ್ಥಳೀಯ ಆಡಳಿತ ಹಾಗೂ ಹವಾಮಾನ ಇಲಾಖೆಯ ಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಸಾರ್ವಜನಿಕರಲ್ಲಿ ಮನವಿ ಮಾಡಲಾಗಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.