



ಬೆಂಗಳೂರು: KSRTC ಬಸ್ ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅನುವು ಮಾಡಿಕೊಡುವ ‘ಶಕ್ತಿ’ ಯೋಜನೆಗೆ ಸಂಬಂಧಿಸಿದ ಅಧಿಕೃತ ಅಧಿಸೂಚನೆಯನ್ನು ಸರ್ಕಾರ ಸೋಮವಾರ ಹೊರಡಿಸಿದೆ. ಅದರಂತೆ, ಮಹಿಳೆಯರು ಉಚಿತವಾಗಿ ಪ್ರಯಾಣಿಸಬೇಕಿದ್ದರೆ ‘ಶಕ್ತಿ ಸ್ಮಾರ್ಟ್ಕಾರ್ಡ್’ ಹೊಂದುವುದು ಕಡ್ಡಾಯವಾಗಿರಲಿದೆ.
ಸೇವಾ ಸಿಂಧು ಪೋರ್ಟಲ್ ಮೂಲಕ ಅರ್ಜಿಗಳನ್ನು ಪಡೆದು, ಶಕ್ತಿ ಸ್ಮಾರ್ಟ್ ಕಾರ್ಡ್ ಗಳನ್ನು ಪಡೆಯಬಹುದು. ಕಾರ್ಡ್ ಗಳನ್ನು ವಿತರಿಸುವ ಪ್ರಕ್ರಿಯೆಯನ್ನು ಮುಂದಿನ ಮೂರು ತಿಂಗಳೊಳಗಾಗಿ ಪೂರ್ಣಗೊಳಿಸತಕ್ಕದ್ದು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ಮಾರ್ಗಸೂಚಿಗಳು: ಐಷಾರಾಮಿ ಬಸ್ ಗಳಾದ ರಾಜಹಂಸ, ನಾನ್-ಎ.ಸಿ.ಸ್ಲೀಪರ್, ವಜ್ರ, ವಾಯುವಜ್ರ, ಐರಾವತ, ಐರಾವತ ಕ್ಲಬ್ ಕ್ಲಾಸ್, ಐರಾವತ ಗೋಲ್ಡ್ ಕ್ಲಾಸ್, ಅಂಬಾರಿ, ಅಂಬಾರಿ ಉತ್ಸವ್, ಫ್ಲೈ ಬಸ್, ಇವಿ ಪವರ್ ಪ್ಲಸ್ (ಎ.ಸಿ. ಬಸ್ಗಳು) ಇವುಗಳಿಗೆ ಈ ಯೋಜನೆಯು ಅನ್ವಯಿಸುವುದಿಲ್ಲ. ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಬಸ್ಸುಗಳನ್ನು ಹೊರತುಪಡಿಸಿ, ಉಳಿದ ರಸ್ತೆ ಸಾರಿಗೆ ಸಂಸ್ಥೆಗಳಾದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ವಾಯುವ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಮತ್ತು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮಗಳ ಎಲ್ಲಾ ಬಸ್ಗಳಲ್ಲಿ (ಅಂತರರಾಜ್ಯ, ಎ.ಸಿ. ಮತ್ತು ಐಷಾರಾಮಿ ಬಸ್ ಗಳನ್ನು ಹೊರತುಪಡಿಸಿ) ಶೇ.50ರಷ್ಟು ಆಸನಗಳನ್ನು ಪುರುಷರಿಗೆ ಕಾಯ್ದಿರಿಸತಕ್ಕದ್ದು. ಈ ಯೋಜನೆಯಡಿ ನಾಲ್ಕು, ಸಾರಿಗೆ ಸಂಸ್ಥೆಗಳಿಗೆ ತಗಲುವ ವೆಚ್ಚವನ್ನು ಸರ್ಕಾರದಿಂದ ಶೂನ್ಯ ಟಿಕೆಟ್/ಶಕ್ತಿ ಸ್ಮಾರ್ಟ್ ಕಾರ್ಡ್ ದತ್ತಾಂಶವನ್ನು ಆಧರಿಸಿ ಭರಿಸಲಾಗುವುದು. ಶಕ್ತಿ, ಸ್ಮಾರ್ಟ್ ಕಾರ್ಡ್ ವಿತರಿಸುವವರೆಗೆ ಭಾರತ ಸರ್ಕಾರ/ಕರ್ನಾಟಕ ಸರ್ಕಾರದ ಇಲಾಖೆ/ಸರ್ಕಾರಿ ಸ್ವಾಮ್ಯದ ಕಛೇರಿಗಳಿಂದ ವಿತರಿಸಿರುವ ಭಾವಚಿತ್ರ ಹಾಗೂ ವಾಸದ ವಿಳಾಸವಿರುವ ಗುರುತಿನ ಚೀಟಿಗಳನ್ನು ಶೂನ್ಯ ಟಿಕೆಟ್ ವಿತರಿಸುವ ಸಂದರ್ಭದಲ್ಲಿ ಪರಿಗಣಿಸಲಾಗುತ್ತದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.